ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ

9 ಸೆಪ್ಟೆಂಬರ್ 2019

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ನೆರೆಯಿಂದ ಹಾನಿಗೀಡಾದ ರೈತರಿಗೆ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರವನ್ನು ನೀಡಿದೆ. ಇನ್ನಷ್ಟು ಯೋಜನೆಗಳನ್ನು ಶೀಘ್ರವೇ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಬಸವರಾಜು ಹಾಗು ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಾಹಂ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್‍ ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ‌ ಮಾಡಿದ ಸಂದರ್ಭದಲ್ಲಿ ಈ ಭರವಸೆ ನೀಡಿದರು.

ಮಹದಾಯಿ ಸಮಸ್ಯೆ ಬಗೆಹರಿಸಲು ಗೋವಾ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಪ್ರವಾಹ ಪೀಡಿತ ಗ್ರಾಮಗಳನ್ನು ಸ್ಥಳಾಂತರ ಮಾಡಿ ಹೊಸ ಗ್ರಾಮಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಸಿದ್ದವಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯಾರಂಭ ಮಾಡಲಾಗಿದೆ ಎಂದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಪರಿಹಾರ ಕೇಂದ್ರಗಳಿಗೆ ಹೋಗಿ ಹಣ ವಸೂಲಿಗೆ ಮುಂದಾಗಿರುವ ಕುರಿತು ಕೋಡಿಹಳ್ಳಿ ಚಂದ್ರಶೇಖರ್ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಅವುಗಳ ವಿರುದ್ಧ ಕ್ರಮ‌ಕೈಗೊಳ್ಳಲು ಮನವಿ ಮಾಡಿದರು.

ತಕ್ಷಣವೇ ರಾಯಚೂರು ಜಿಲ್ಲಾಧಿಕಾರಿಗೆ ಕರೆ ಮಾಡಿದ ಮುಖ್ಯಮಂತ್ರಿಗಳು ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಬರ ಪರಿಹಾರ ಮೊತ್ತ ಬಿಡುಗಡೆ, ಕೃಷ್ಣಾ ನದಿ ನಿರ್ವಹಣಾ ಪ್ರಾಧಿಕಾರ ರಚನೆ, ನೀರಾ ಮಂಡಳಿ ಸ್ಥಾಪನೆ, ಯಶಸ್ವಿನಿ ಯೋಜನೆ ಜಾರಿ ಸೇರಿದಂತೆ ರೈತರ ನಿಯೋಗ ಸಲ್ಲಿಸಿದ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.